ಪಣಜಿ, ಜ.15 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪಣಜಿಯ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರ ಆರೋಗ್ಯ ವಿಚಾರಿಸಿದರು.
ಪ್ರಧಾನಿ ಮೋದಿ ಅವರು ದೂರವಾಣಿ ಮೂಲಕ ಶ್ರೀಪಾದ್ ನಾಯಕ್ ಅವರೊಂದಿಗೆ ಮಾತನಾಡಿದ್ದು, ಆರೋಗ್ಯ ವಿಚಾರಿಸಿ, ಕಾಳಜಿವಹಿಸುವಂತೆ ತಿಳಿಸಿದ್ದಾರೆ ಎಂದು ಅವರ ವಿಶೇಷ ಅಧಿಕಾರಿ ಸೂರಜ್ ನಾಯಕ್ ಸುದ್ದಿಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಸ್ಪತ್ರೆಗೆ ಭೇಟಿ ನೀಡಿದ್ದು, ಶ್ರೀಪಾದ್ ನಾಯಕ್ ಅವರ ಆರೋಗ್ಯ ವಿಚಾರಿಸಿದ್ದರು.
ಇತ್ತೀಚೆಗೆ ಕಾರವಾರ ಸಮೀಪದ ಅಂಕೋಲ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವರು ತೀವ್ರವಾಗಿ ಗಾಯಗೊಂಡಿದ್ದು, ಸಚಿವರಿಗೆ ಪಣಜಿಯ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವರ ಆರೋಗ್ಯದಲ್ಲಿ ಸುಧಾರಣೆ ಕಂಡಿರುವುದಾಗಿ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ.