ಬೆಂಗಳೂರು, ಜ. 15 (DaijiworldNews/MB) : ''ರಾಜ್ಯದ 243 ಕಡೆಗಳಲ್ಲಿ ಶನಿವಾರ (ಜನವರಿ 16) ಕೊರೊನಾ ಲಸಿಕೆ ನೀಡುತ್ತಿದ್ದು, ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಕೇಂದ್ರಗಳಲ್ಲಿ ನೀಡಲಾಗುವುದು'' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಎಂದು ತಿಳಿಸಿದರು.
ಕೊರೊನಾ ಲಸಿಕೆ ವಿತರಣೆ ಸಂಬಂಧಿಸಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ''ಶನಿವಾರ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಸಿಕೆ ವಿತರಣೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ'' ಎಂದರು.
''ಮೊದಲಿಗೆ ಲಸಿಕೆ ನೀಡಲು ಜನಪ್ರತಿನಿಧಿಗಳನ್ನೇ ಆರಿಸಬಹುದಿತ್ತು. ಆದರೆ ಮೊದಲು ಕೊರೊನಾ ನಿಯಂತ್ರಣಕ್ಕೆ ಶ್ರಮಿಸುವವರಿಗೆ ಮೊದಲು ಆದ್ಯತೆ ನೀಡಲಾಗುತ್ತದೆ. ಬಳಿಕ ಇತರರಿಗೆ ನೀಡಲಾಗುತ್ತದೆ'' ಎಂದು ತಿಳಿಸಿದರು.
ಇನ್ನು, ''ಲಸಿಕೆಯಲ್ಲಿ ಯಾವುದೇ ಅಡ್ಡಪರಿಣಾಮ ಉಂಟಾದರೂ ಸ್ಥಳದಲ್ಲೇ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿ ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಸರ್ಕಾರದ ಸಾಮಾಜಿಕ ಜಾಲತಾಣಗಳಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ'' ಎಂದು ಸ್ಪಷ್ಟಪಡಿಸಿದರು.