ಬೆಂಗಳೂರು, ಜ. 17 (DaijiworldNews/MB) : ''ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ ಆರ್ಎಎಫ್ ಘಟಕದ ಅಡಿಗಲ್ಲು ಫಲಕ ಅನಾವರಣಗೊಳಿಸಲಾಗಿದ್ದು ಇದರಲ್ಲಿ ಕನ್ನಡ ಹೊರತಾಗಿ ಹಿಂದಿ ಮತ್ತು ಆಂಗ್ಲಭಾಷೆಯಿದೆ. ಸಂಪೂರ್ಣವಾಗಿ ಕನ್ನಡವನ್ನು ಅವಗಣನೆ ಮಾಡಲಾಗಿದೆ'' ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು ''ತ್ರಿಭಾಷಾ ಸೂತ್ರ ಉಲ್ಲಂಘಿಸಿರುವ ಅಮಿತ್ ಶಾ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು'' ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಗೃಹ ಅಮಿತ್ ಶಾ ಅವರು ಫಲಕ ಅನಾವರಣ ಮಾಡುವ ಫೋಟೋವನ್ನು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ''ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ ಆರ್ಎಎಫ್ ಘಟಕಕ್ಕೆ ಗೃಹಸಚಿವರಾದ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ'' ಎಂದು ಆರೋಪಿಸಿದ್ದಾರೆ.
''ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ'' ಎಂದು ಟೀಕಿಸಿದ್ದಾರೆ.
''ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಶಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ'' ಎಂದು ಹೇಳಿದರು.
''ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆರ್ಎಎಫ್ ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಶಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು'' ಎಂದು ಒತ್ತಾಯಿಸಿದ್ದಾರೆ.
''ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ'' ಎಂದು ವಾಗ್ದಾಳಿ ನಡೆಸಿದ್ದಾರೆ.