ಬೆಂಗಳೂರು, ಜ. 18 (DaijiworldNews/MB) : ''ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ'' ಎಂದು ಹೇಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ''ಉದ್ದವ್ ಅವರೇ ಇತ್ಯರ್ಥವಾಗಿರುವ ವಿಷಯ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ'' ಎಂದು ಎಚ್ಚರಿಕೆ ನೀಡಿದ್ದಾರೆ.
"ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಅಧಿಕ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಮತ್ತು ಸಂಸ್ಕೃತಿ ಹೊಂದಿರುವ ಪ್ರದೇಶಗಳನ್ನು ಮಹಾರಾಷ್ಟಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಗಡಿ ವಿಷಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಇದಾಗಿದೆ" ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರವಿವಾರ ಹೇಳಿದ್ದರು.
ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ದ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ''ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ'' ಎಂದು ಎಚ್ಚರಿಕೆ ನೀಡಿದ್ದಾರೆ.
''ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ದವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ'' ಎಂದು ತಿರುಗೇಟು ನೀಡಿದ್ದಾರೆ.
''ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು, ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು'' ಎಂದು ಆಗ್ರಹಿಸಿದ್ದಾರೆ.
''ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ'' ಎಂದು ಹೇಳಿದ್ದಾರೆ.