ಬೆಂಗಳೂರು,ಜ.18 (DaijiworldNews/HR): "ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬೆಳಗಾವಿ ಗಡಿ ವಿಚಾರದಲ್ಲಿ ನೀಡಿದ ಹೇಳಿಕೆ ನೀಡಿದ್ದು, ಇದು ಅವರ ಉದ್ಧಟತನವನ್ನು ಪ್ರದರ್ಶಿಸುತ್ತದೆ" ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು" ಎಂದರು.
"ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿದ್ದು, ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ" ಎಂದರು.
ಇನ್ನು "ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ" ಎಂದು ಹೇಳಿದ್ದಾರೆ.