ಜಲ್ಪೈಗುರಿ, ಜ.20 (DaijiworldNews/MB) : ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ನಗರದಲ್ಲಿ ಕಳೆದ ರಾತ್ರಿ ನಡೆದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ಕಚೇರಿಯು ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಘೋಷಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಚೇರಿಯು, ಪಶ್ಚಿಮ ಬಂಗಾಳದ ಜಲ್ಪೈಗುರಿಯ ಧುಪ್ಗುರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತವು ಅತ್ಯಂತ ದುಃಖಕರವಾಗಿದೆ. ದುಃಖದ ಈ ಸಮಯದಲ್ಲಿ, ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದಿದೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ನೀಡಲಾಗುತ್ತದೆ ಎಂದು ತಿಳಿಸಿದೆ.
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ನಗರದಲ್ಲಿ ಕಳೆದ ರಾತ್ರಿ ದಟ್ಟ ಮಂಜು ಆವರಿಸಿದ ಕಾರಣ ಸರಿಯಾಗಿ ದಾರಿ ಕಾಣಿಸದೆ ಭೀಕರ ಅಪಘಾತ ಸಂಭವಿಸಿದ್ದು 13 ಮಂದಿ ಸಾವನ್ನಪ್ಪಿದರೆ, 17 ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುಜರಾತ್ನ ಕೋಸಂಬಾದಲ್ಲಿ ಟ್ರಕ್ ಹರಿದು 13 ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳವಾರ ವರದಿಯಾಗಿದೆ. ಮೃತರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಪ್ರಧಾನಿ ಸಚಿವಾಲಯ ಘೋಷಣೆ ಮಾಡಿತ್ತು.