ಬೆಂಗಳೂರು, ಜ.20 (DaijiworldNews/HR): "ರಾಜ್ಯಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆ-2020 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಅದಕ್ಕೆ ಪೂರಕವಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, "ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ವಿಳಂಬ ಮಾಡಬಾರದು, ಅದಕ್ಕೆ ಪೂರಕವಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು" ಎಂದು ತಿಳಿಸಿದ್ದಾರೆ.
ಇನ್ನು "ಕೊರೊನಾದಿಂದಾಗಿ ಕಷ್ಟದಲ್ಲಿ ಜನಜೀವನ ಸುಧಾರಿಸುತ್ತಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಬಲ ತುಂಬಲು ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನ ಚುರುಕುಗೊಳಿಸಬೇಕು. ಬೇಸಿಗೆ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಬೇಕು" ಎಂದು ಎಚ್ಚರಿಕೆ ನೀಡಿದ್ದಾರೆ.
"ಬಾಲ್ಯ ವಿವಾಹಗಳು ಹೆಚ್ಚಾಗಿ ಶಾಲೆಗಳು ಮುಚ್ಚಿದ್ದ ಸಮಯದಲ್ಲಿ ನಡೆಯುತ್ತಿದೆ ಎಂಬ ಮಾಹಿತಿ ಲಭಿಸಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು" ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.