ಬೆಂಗಳೂರು, ಜ.20 (DaijiworldNews/PY): ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತಿಭಟನಾ ಮೆರವಣಿಗೆಯು ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ರಾಜಭವನದತ್ತ ಹೊರಟಿತ್ತು. ಪ್ರತಿಭಟನೆಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಂಡಿದ್ದರು.
ಈ ವೇಳೆ ಮಹಾರಾಣಿ ಕಾಲೇಜು ಬಳಿ ಪೊಲೀಸರು ರಾಜಭವನ ಚಲೋ ಪ್ರತಿಭಟನೆಯನ್ನು ತಡೆದಿದ್ದು, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಜಿ.ಪರಮೇಶ್ವರ್ ಸೇರಿದಂತೆ ಹಲವು ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.