ನವದೆಹಲಿ, ಜ.23 (DaijiworldNews/MB) : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಸರ್ಕಾರದ ನಡುವೆ ನಡೆದ 11ನೇ ಸುತ್ತಿನ ಮಾತುಕತೆಯೂ ವಿಫಲವಾಗಿದ್ದು, ರೈತರು ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ನಡೆಸುವುದು ಖಚಿತವಾಗಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದಲ್ಲಿ ನಡೆದ ರೈತ ನಾಯಕರ ಸಭೆ ವಿಫಲಗೊಂಡ ಹಿನ್ನೆಲೆ ರೈತರು ಮುಂದೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಇದರಂತೆ ಈ ಹಿಂದೆಯೇ ನಿರ್ಧರಿಸಿದ್ದ ಟ್ರ್ಯಾಕ್ಟರ್ ಪರೇಡ್ ನಿಗದಿ ಪ್ರಕಾರ ಜನವರಿ 26 ರಂದು ನಡೆಯಲಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.
ಇನ್ನು ಈ ನಡುವೆ ಕೇಂದ್ರ ಸರ್ಕಾರ ಮುಂದಿಟ್ಟಿರುವ ಪ್ರಸ್ತಾವನೆಯನ್ನು ರೈತ ನಾಯಕರು ಒಪ್ಪಿಕೊಂಡರೆ ಮಾತ್ರ ಮುಂದಿನ ಸುತ್ತಿನ ಮಾತುಕತೆ ನಡೆಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ಹೇಳಿದ್ದಾರೆ.
ಕೇಂದ್ರದ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತರು 50 ದಿನಗಳಿಗಿಂತಲೂ ಅಧಿಕ ಕಾಲದಿಂದ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಹಾಗೂ ರೈತ ಮುಖಂಡರ ನಡುವೆ ನಡೆದ ಹಲವು ಸುತ್ತಿನ ಮಾತುಕತೆ ವಿಫಲವಾಗಿದೆ.