ಬೆಂಗಳೂರು, ಜ. 23 (DaijiworldNews/SM): ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಹಾಗೂ ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಪ್ರಮುಖ ಕಾರಣವೆಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಇದಕ್ಕೆ ಮುಖ್ಯಮಂತ್ರಿಯವರೇ ಪ್ರಮುಖ ಕಾರಣರೆಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯೇ ಅಪರಾಧ. ಆದರೆ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿರುವುದು ಎಷ್ಟು ಸರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.