ಶ್ರೀನಗರ, ಜ.26 (DaijiworldNews/PY): ಜಮ್ಮು-ಕಾಶ್ಮೀರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಉಗ್ರರು ಯಾವುದೇ ರೀತಿಯಾದ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಾಧ್ಯವಾಗದಂತೆ ಮುಂಜಾಗ್ರತೆಯ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಾಂದರ್ಭಿಕ ಚಿತ್ರ
"ಭದ್ರತಾ ನಿಟ್ಟಿನಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ" ಎಂದು ಅಧಿಕಾರಿಗಳು ಹೇಳಿದ್ದಾರೆ.
"ಗಣರಾಜ್ಯೋತ್ಸವ ಹಿನ್ನೆಲೆ ಸ್ಥಳೀಯ ಮಟ್ಟದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಚರಣೆ ಮುಗಿದ ತಕ್ಷಣವೇ ಇಂಟರ್ನೆಟ್ ಸೇವೆಯನ್ನು ಪ್ರಾರಂಭ ಮಾಡಲಾಗುವುದು" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಗಣರಾಜ್ಯೋತ್ಸವ ಸಮಾರಂಭ ಹಾಗೂ ರೈತರಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಯಲಿದ್ದು, ದೇಶಾದ್ಯಂತ ಯಾವುದೇ ರೀತಿಯಾದ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಗಣರಾಜ್ಯೋತ್ಸವ ಆಚರಣೆಗೆ ಮುಂಚಿತವಾಗಿ ದೇಶಾದ್ಯಂತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.