ನವದೆಹಲಿ, ಜ.26 (DaijiworldNews/MB) : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವವಾದ ಈ ದಿನದಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದು ಈಗಾಗಲೇ ಪೊಲೀಸ್ ಭದ್ರತೆಯೊಂದಿಗೆ ಪರೇಡ್ ಆರಂಭವಾಗಿದೆ. ಏತನ್ಮಧ್ಯೆ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ವರದಿಯಾಗಿದೆ.
ಗಾಝಿಪುರ್ ಸಮೀಪ ರೈತರು ಟ್ರ್ಯಾಕ್ಟರ್ ಪರೇಡ್ ಆರಂಭ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮೇಲಿನಿಂದ ನಿಂತು ಅಶ್ರುವಾಯು ಪ್ರಯೋಗಿಸುತ್ತಿರುವ ವೀಡಿಯೋ ಟ್ವಿಟರ್ನಲ್ಲಿ ವೈರಲ್ ಆಗಿದೆ.
ಸಿಂಘು ಗಡಿಯಿಂದ ದೆಹಲಿಯ ಸಂಜಯ್ ಗಾಂಧಿ ನಗರಕ್ಕೆ ಆಗಮಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಲಾಠಿಚಾರ್ಜ್ ಕೂಡಾ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.