ಮಂಗಳೂರು, ಜ.26 (DaijiworldNews/MB) : ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹಾಗೂ ವೇದವ್ಯಾಸ ಕಾಮತ್ ಅವರು ಮಂಗಳೂರಿನಲ್ಲಿರುವ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ಡಿಎಂಓ ಸದಾಶಿವ್ ರಾವ್, ಕೆಎಂಸಿ ಆಸ್ಪತ್ರೆಯ ವೈದ್ಯರುಗಳೊಂದಿಗೆ ಇದೇ ಸಂದರ್ಭದಲ್ಲಿ ಸಚಿವರು, ಶಾಸಕರು ತುರ್ತು ಸಭೆ ನಡೆಸಿ ರೋಗಿಗಳ ಬಳಿ ಸ್ವತ: ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಉತ್ತಮ ಸೌಕರ್ಯ ನೀಡಲು ಯೋಗ್ಯ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಲಾಯಿತು.