ನವದೆಹಲಿ, ಜ.26 (DaijiworldNews/MB) : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವವಾದ ಈ ದಿನದಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಈ ಸಂದರ್ಭ ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ. ಈ ನಡುವೆ ಓರ್ವ ಪ್ರತಿಭಟನಾನಿರತ ರೈತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಪೊಲೀಸರ ಗುಂಡೇಟಿನಿಂದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಟ್ರಾಕ್ಟರ್ ಚಲಾಯಿಸುತ್ತಿದ್ದ ರೈತನಿಗೆ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಮಗುಚಿ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ರೈತರು ಆರೋಪಿಸಿದ್ದಾರೆ. ಆದರೆ ಪೊಲೀಸರು ಟ್ರ್ಯಾಕ್ಟರ್ ಮಗುಚಿದ ಕಾರಣ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದಿರುವ ಬಗ್ಗೆ ವರದಿಯಾಗಿದೆ.
ಸದ್ಯ ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ ಎಂದು ಹೇಳಲಾಗಿದೆ.