ಬೆಂಗಳೂರು, ಜ.26 (DaijiworldNews/MB) : ''ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರಾಕ್ಟರ್ ಪರೇಡ್ಗೆ ಸಂಬಂಧಿಸಿ ಅಹಿತಕರ ಘಟನೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಹೊಣೆ ಹೊರಬೇಕು'' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವವಾದ ಈ ದಿನದಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಈ ಸಂದರ್ಭ ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ. ರ್ಯಾಲಿ ಹಿಂಸಾಚಾರಕ್ಕೆ ತಿರುಗಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ''ರೈತ ಹೋರಾಟಗಾರರ ಆಕ್ರೋಶ ಸ್ಪೋಟಗೊಳ್ಳಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಬೇಕೆಂದು ಆಗ್ರಹಿಸುತ್ತೇನೆ'' ಎಂದು ಹೇಳಿದ್ದಾರೆ.
''ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರಾಕ್ಟರ್ ಪರೇಡ್ಗೆ ಸಂಬಂಧಿಸಿದಂತೆ ಅಹಿತಕರ ಘಟನೆಗಳು ನಡೆದರೆ ಅದರ ಹೊಣೆಯನ್ನು ನರೇಂದ್ರ ಮೋದಿ ಸರ್ಕಾರವೇ ವಹಿಸಿಕೊಳ್ಳಬೇಕಾಗುತ್ತದೆ'' ಎಂದು ವಾಗ್ದಾಳಿ ನಡೆಸಿದ್ದಾರೆ.
''ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತನ್ನ ರೈತ ವಿರೋಧಿ ನಿಲುವಿಗೆ ತಕ್ಕ ಪ್ರತಿಫಲವನ್ನು ಉಣ್ಣಬೇಕಾಗುತ್ತದೆ'' ಎಂದು ಎಚ್ಚರಿಕೆ ನೀಡಿದ್ದಾರೆ.