ನವದೆಹಲಿ, ಜ.26 (DaijiworldNews/PY): ರೈತರ ಪ್ರತಿಭಟನೆ ಬಳಿಕ ಭದ್ರತೆ ವಿಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗೃಹ ಕಾರ್ಯದರ್ಶಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಸಭೆ ನಡೆಸಿದರು.
ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಹಾಗೂ ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್.ಶ್ರೀವಾಸ್ತವ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ, ರೈತರ ಗುಂಪು ಕೆಂಪುಕೋಟೆಯ ಆವರಣಕ್ಕೆ ಲಗ್ಗೆ ಇಟ್ಟಿದ್ದು, ಪೊಲೀಸರು ಹಾಗೂ ರೈತರ ನಡುವೆ ನಡೆದ ಭಾರೀ ಘರ್ಷಣೆಯ ಬಗ್ಗೆ ತಿಳಿಸಿದರು.
ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ಭದ್ರತೆಗಾಗಿ ಅರೆಸೇನಾ ಪಡೆಯನ್ನು ನಿಯೋಜನೆ ಮಾಡುವ ಸಾಧ್ಯತೆಗಳಿವೆ. ಏತನ್ಮಧ್ಯೆ ಸಭೆಯಲ್ಲಿ ನಡೆದ ಚರ್ಚೆಯ ವಿಚಾರವಾಗಿ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವವಾದ ಈ ದಿನದಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಈ ಸಂದರ್ಭ ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ. ರ್ಯಾಲಿ ಹಿಂಸಾಚಾರಕ್ಕೆ ತಿರುಗಿದೆ. ಈ ನಡುವೆ, ಸಿಂಘು, ಟಿಕ್ರಿ ಹಾಗೂ ಘಾಜಿಪುರ ಗಡಿ ಭಾಗಗಳು ಸೇರಿದಂತೆ ಕೆಲ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದೆ.