ಬೆಂಗಳೂರು, ಜ.27 (DaijiworldNews/MB) : ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಶಿಕ್ಷೆಗೆ ಗುರಿಯಾಗಿದ್ದ ಪಕ್ಷದ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಅಧಿಕೃತವಾಗಿ ಬಿಡುಗಡೆಯಾಗಿದ್ದು ಬೆಂಬಲಿಗರ ಸಂಭ್ರಮಿಸಿದ್ದಾರೆ.
ಕೊರೊನಾ ಸೋಂಕು ಕಾರಣದಿಂದಾಗಿ ಶಶಿಕಲಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರಾಗೃಹದ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಶಶಿಕಲಾ ಸಹಿ ಪಡೆದು ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಆದ್ದರಿಂದ ಶಶಿಕಲಾ ವಿಕ್ಟೋರಿಯಾ ಆಸ್ಪತ್ರೆಯಿಂದಲೇ ಅವರು ಬಿಡುಗಡೆಯಾಗಿ ತಮಿಳುನಾಡಿಗೆ ಹೋಗಲಿದ್ದಾರೆ.
ಈ ನಡುವೆ ಬೆಂಬಲಿಗರು ವಿಕ್ಟೋರಿಯಾ ಆಸ್ಪತ್ರೆಯ ಹೊರಗೆ ಕಾದು ಕುಳಿತಿದ್ದಾರೆ. ಶಶಿಕಲಾ ಪರವಾಗಿ ಘೋಷಣೆ ಕೂಗಿ, ಸಿಹಿತಿಂಡಿಗಳನ್ನು ವಿತರಿಸಿ ಸಂಭ್ರಮಿಸುತ್ತಿದ್ದಾರೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತೆ ವಿ.ಕೆ. ಶಶಿಕಲಾ ಅವರು 66 ಕೋಟಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ 2017 ರ ಫೆಬ್ರವರಿಯಿಂದ ಪರಪ್ಪನ ಅಗ್ರಹಾರದಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ.