ನವದೆಹಲಿ, ಜ.28 (DaijiworldNews/MB) : ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಡಿನೋಟಿಫೈ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಚಿವ ಮುರುಗೇಶ್ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೆ ಈ ಸಂದರ್ಭದಲ್ಲೇ ಯಡಿಯೂರಪ್ಪ ಅವರ ವಿರುದ್ಧದ ಕ್ರಿಮಿನಲ್ ದೂರಿಗೆ ಸಂಬಂಧಿಸಿ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್ ಜನವರಿ 5ರಂದು ನೀಡಿರುವ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.
ಉದ್ಯಮಿ ಎ.ಅಲಂ ಪಾಷಾ ಎಂಬವರು 2010–11ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವರಾಗಿದ್ದ ಮುರುಗೇಶ್ ನಿರಾಣಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಭೂಮಿ ಮಂಜೂರು ಮಾಡಿ ಬಳಿಕ ನಕಲಿ ದಾಖಲೆ ಸೃಷ್ಟಿ ಮಾಡಿ ಆ ಭೂಮಿಯನ್ನು ತಮ್ಮಿಂದ ವಾಪಾಸ್ ಪಡೆದಿದ್ದಾಗಿ ಆರೋಪಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣಕ್ಕೆ ಸಂಬಂಧಿಸಿ ಬಿಎಸ್ವೈ ಹಾಗೂ ನಿರಾಣಿಯ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ್ದು, ಪಾಷಾ ಅವರಿಗೆ ನೋಟಿಸ್ ಜಾರಿಗೊಳಿಸಿದೆ.