ಬೆಂಗಳೂರು, ಜ.31 (DaijiworldNews/PY): "ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, "ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರ್ಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ಇಲ್ಲಿನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತೆ" ಎಂದಿದ್ದಾರೆ.
"ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ" ಎಂದು ತಿಳಿಸಿದ್ದಾರೆ.
"ಬಿಡದಿಯ ಟೊಯೊಟಾ ಘಟಕದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಾ ಸುಮಾರು 3 ತಿಂಗಳಾಗುತ್ತಾ ಬಂತು, ಇಷ್ಟರೊಳಗೆ ರಾಜ್ಯ ಸರ್ಕಾರ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಕಾರ್ಮಿಕ ಸಚಿವರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಅಂದ್ರೆ ಸಿಎಂ ಬಿ.ಎಸ್.ಯಡಿಯೂರಪ್ಪಅವರೇ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕಿತ್ತು" ಎಂದಿದ್ದಾರೆ.
"ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ನಾರಾಯಣ ಅವರು ಟೊಯೊಟಾ ಕಂಪನಿಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಗಳ ನಡುವೆ ಸಂಧಾನ ಸಭೆ ನಡೆಸಿದ್ದರು. ಕೇವಲ 20 ನಿಮಿಷ ಸಭೆ ನಡೆಸಿ ಸಮಸ್ಯೆ ಬಗೆಹರಿದಿದೆ ಅಂತ ಹೇಳಿದ್ರು. ಸಮಸ್ಯೆ ಬಗೆಹರಿದಿದ್ರೆ ಕಾರ್ಮಿಕರೇಕೆ ಇನ್ನೂ ಮುಷ್ಕರನಿರತರಾಗಿದ್ದಾರೆ?" ಎಂದು ಪ್ರಶ್ನಿಸಿದ್ದಾರೆ.
"ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ" ಎಂದಿದ್ದಾರೆ.