ವಿಧಾನಸಭೆ, ಫೆ.04 (DaijiworldNews/HR): "ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ಅವರು ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ಆರೋಪ ಎದುರಿಸುತ್ತಿದ್ದು, ಮುಖ್ಯಮಂತ್ರಿ ಅಧಿಕಾರದಲ್ಲಿ ಇರಬೇಕಾ ಎಂದು ಜನರು ಪ್ರಶ್ನಿಸುತ್ತಿದ್ದಾರೆ" ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಸಿಎಂ ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಹೋಗಿದ್ದು, ಸುಪ್ರೀಂ ಕೋರ್ಟ್ ಪ್ರಕರಣ ವಜಾ ಮಾಡಲು ನಿರಾಕರಿಸಿದ್ದು, ಬಂಧನ ಮಾಡದಂತೆ ಸೂಚನೆ ನೀಡಿದೆ. ಇದು ಒಂದು ರೀತಿ ಬೇಲ್ ನೀಡಿದಂತೆ ಆಗಿದೆ" ಎಂದರು.
ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, "ಈ ಪ್ರಕರಣ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಚರ್ಚೆ ಮಾಡುವುದು ಸರಿಯಲ್ಲ. ಹಾಗಾಗಿ ಈ ವಿಷಯದ ಮೇಲೆ ಚರ್ಚೆಗೆ ಅವಕಾಶ ನೀಡಬಾರದು" ಎಂದು ಮನವಿ ಮಾಡಿಕೊಂಡಿದ್ದಾರೆ.