ಡೆಹ್ರಾಡೂನ್, ಫೆ.08 (DaijiworldNews/MB) : ''ಹಿಮ ಪ್ರವಾಹಕ್ಕೆ ಕಾರಣ ಏನೆಂದು ತಿಳಿದಿಲ್ಲ, ಆದರೆ ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ'' ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.
ಚಮೋಲಿಯ ತಪೋವನ ಅಣೆಕಟ್ಟೆ ಬಳಿ ಶ್ವಾನ ದಳದ ಸಹಾಯದೊಂದಿಗೆ ಶೋಧ ಕಾರ್ಯ ನಡೆಯುತ್ತಿದೆ. ನೂರಾರು ಇಂಡೊ–ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿಯೂ ಶೋಧಕಾರ್ಯದಲ್ಲಿ ತೊಡಗಿದ್ದಾರೆ.
ರಿಷಿಕೇಶ ಮತ್ತು ಹರಿದ್ವಾರಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಹಾಗೆಯೇ ಉತ್ತರ ಪ್ರದೇಶದ ಗಂಗಾ ನದಿ ತಟದಲ್ಲಿರುವ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಹಿಮ ಪ್ರವಾಹದ ಸಂದರ್ಭ ಸುರಂಗದಲ್ಲಿ ಸಿಲುಕಿದ್ದ 16 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಇನ್ನು ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ನಾಪತ್ತೆಯಾಗಿದ್ದಾರೆ.