ನವದೆಹಲಿ, ಫೆ.09 (DaijiworldNews/MB) : ಅಮೇರಿಕಾದ ನೂತನ ಅಧ್ಯಕ್ಷ ಜೋ ಬಿಡೆನ್ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಮಾತುಕತೆಯಲ್ಲಿ ಉಭಯ ನಾಯಕರು ಕೊರೊನಾ ಸಾಂಕ್ರಾಮಿಕ, ಹವಾಮಾನ ಬದಲಾವಣೆ, ಆರ್ಥಿಕತೆ, ಏಷ್ಯಾ ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಸ್ಥಾಪನೆ ಮಾಡುವ ವಿಚಾರದಲ್ಲಿ ಬದ್ದತೆ ಹೊಂದಿರುವ ಬಗ್ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ''ಜೋ ಬಿಡೆನ್ ಅವರೊಂದಿಗೆ ಮಾತನಾಡಿದೆ. ಅವರ ಯಶಸ್ಸಿಗೆ ನನ್ನ ಶುಭಾಶಯಗಳನ್ನು ತಿಳಿಸಿದೆ. ನಾವು ಪ್ರಾದೇಶಿಕ ಸಮಸ್ಯೆಗಳು ಮತ್ತು ಆದ್ಯತೆಗಳ ಬಗ್ಗೆ ಚರ್ಚಿಸಿದ್ದೇವೆ. ಹವಾಮಾನ ಬದಲಾವಣೆಯ ವಿರುದ್ಧ ನಮ್ಮ ಸಹಕಾರವನ್ನು ಹೆಚ್ಚಿಸಲು ನಾವು ಒಪ್ಪಿದ್ದೇವೆ'' ಎಂದು ತಿಳಿಸಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ''ಅಧ್ಯಕ್ಷ ಬಿಡೆನ್ ಮತ್ತು ನಾನು ನಿಯಮ ಆಧಾರಿತ ಅಂತರರಾಷ್ಟ್ರೀಯ ಆದೇಶಕ್ಕೆ ಬದ್ಧರಾಗಿದ್ದೇವೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಮತ್ತು ಅದರಾಚೆ ಶಾಂತಿ ಮತ್ತು ಸುರಕ್ಷತೆಗಾಗಿ ನಮ್ಮ ಕಾರ್ಯತಂತ್ರದ ಸಹಭಾಗಿತ್ವವನ್ನು ಬಲಪಡಿಸಲು ನಾವು ಎದುರು ನೋಡುತ್ತಿದ್ದೇವೆ'' ಎಂದು ಉಲ್ಲೇಖಿಸಿದ್ದಾರೆ.