ಬೆಂಗಳೂರು, ಫೆ.11(DaijiworldNews/HR): "ಕೊರೊನಾದಿಂದಾಗಿ ಹಲವು ತಿಂಗಳಿನಿಂದ ಶಾಲೆಗಳು ಮುಚ್ಚಿರುವುದರಿಂದ ಬಾಲ ಕಾರ್ಮಿಕರ ಹಾಗೂ ಬಾಲ್ಯ ವಿವಾಹ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿ ಪರಿಹಾರ ಕ್ರಮಗಳಿಗೆ ಮುಂದಾಗಬೇಕು" ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಕುರಿತು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, "ಪ್ರತಿ ತಾಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ-ಸಿಡಿಪಿಒ, ಕಾರ್ಮಿಕ ಇಲಾಖೆಯ ತನಿಖಾಧಿಕಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ ಒಂದು ತಿಂಗಳ ಅವಧಿಯಲ್ಲಿ ತಪಾಸಣೆಗಳನ್ನು ಪೂರ್ಣಗೊಳಿಸಬೇಕು" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನು "ಬಾಲ ಕಾರ್ಮಿಕ ಸಮಸ್ಯೆಯಲ್ಲಿ ಸಿಲುಕಿದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರೆಸುವ, ಬಾಲ್ಯ ವಿವಾಹದ ಸುಳಿಗೆ ಸಿಕ್ಕ ವಿದ್ಯಾರ್ಥಿಗಳಿಗೆ ಅವಶ್ಯಕತೆಗೆ ಅನುಗುಣವಾಗಿ ವಿದ್ಯಾಭ್ಯಾಸ, ಪುನರ್ವಸತಿ ಕಲ್ಪಿಸುವ ಬಗ್ಗೆ ಈ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು" ಎಂದು ತಿಳಿಸಿದ್ದಾರೆ.