ಬೆತುಲ್, ಫೆ.14 (DaijiworldNews/PY): ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಸಿನಿಮಾ ಚಿತ್ರೀಕರಣ ನಡೆಸುತ್ತಿದ್ದ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿಗಳನ್ನು ಪ್ರಯೋಗ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೃಷಿ ಕಾಯ್ದೆಗಳ ವಿರುದ್ದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಸೇರಿದಂತೆ ಹಲವು ವಿಚಾರಗಳ ಬಗ್ಗೆ ನಟಿ ಕಂಗನಾ ರಣಾವತ್ ಅವರು ಟ್ವೀಟ್ ಮಾಡಿದ್ದು, ವಿವಾದಕ್ಕೊಳಗಾಗಿದ್ದರು.
ಈ ಬಗ್ಗೆ ಕಂಗನಾ ಕ್ಷಮೆ ಕೇಳಬೇಕು ಎನ್ನುವ ಬೇಡಿಕೆಯೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಕಂಗನಾ ಅವರು ವಿದ್ಯುತ್ ಕೇಂದ್ರದ ಕಲ್ಲಿದ್ದಲು ನಿರ್ವಹಣಾ ಘಟಕದಲ್ಲಿ ಶೂಟಿಂಗ್ನಲ್ಲಿ ನಿರತರಾಗಿದ್ದರು.
ಸ್ಥಳದಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು.
ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ಸೂಚನೆಯಂತೆ ಕಂಗನಾ ರಣಾವತ್ ಅವರ ಸಿನಿಮಾ ಚಿತ್ರೀಕರಣದ ಪ್ರದೇಶದಲ್ಲಿ ಹೆಚ್ಚಿನ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.