ಬೆಂಗಳೂರು, ಫೆ.18 (DaijiworldNews/PY): "ಮಾಜಿ ಮೇಯರ್ ಸಂಪತ್ ರಾಜ್ ವಿರುದ್ದ ಕ್ರಮ ಕೈಗೊಳ್ಳುವುದು ಖಚಿತ" ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಗುರುವಾರ ಕುಮಾರಕೃಪಾ ಅತಿಥಿ ಗೃಹದ ಬಳಿ ಮಾತನಾಡಿದ ಅವರು, "ಸಂಪತ್ ರಾಜ್ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಮನವಿ ಮಾಡುವ ಸಲುವಾಗಿ ನಾನು ಇಲ್ಲಿಗೆ ಬಂದಿದ್ದು, ಈ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ತಿಳಿಸುತ್ತೇನೆ" ಎಂದು ಹೇಳಿದರು.
"ಸಂಪತ್ ರಾಜ್ ಅವರ ವಿರುದ್ದ ಆರೋಪ ಸಾಬೀತಾಗಿಲ್ಲ ಎಂದು ಈ ಮೊದಲು ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದರು. ಆದರೆ, ಸಂಪತ್ ರಾಜ್ ಜೈಲಿಗೆ ಹೋಗಿ ಬಂದಾಗಿದ್ದು, ಹಾಗಿರುವಾಗ ಸಂಪತ್ ರಾಜ್ ಮೇಲೆ ಕ್ರಮ ಕೈಗೊಳ್ಳಬೇಕು" ಎಂದು ಒತ್ತಾಯಿಸಿದ್ದಾರೆ.
ಮಾಜಿ ಮೇಯರ್ ಸಂಪತ್ ರಾಜ್ ಅವರು ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಹಾಗೂ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಯಾಗಿದ್ದಾರೆ.