ಬೆಳಗಾವಿ, ಫೆ. 20 (DaijiworldNews/HR): "ಶಾಸಕ ಜಮೀರ್ ಅಹ್ಮದ್ ಅವರು ಸಿದ್ದರಾಮಯ್ಯ ಅವರ ಅಭಿಮಾನಿಯಾಗಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿದ್ದು, ಇದರಲ್ಲಿ ಯಾವುದೇ ತಪ್ಪಿಲ್ಲ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಂಬ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಎಂದು ಹೈಕಮಾಂಡ್ ಎಲ್ಲಿಯೂ ಹೇಳಿಲ್ಲ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 113 ಸೀಟುಗಳನ್ನು ಪಡೆದ ನಂತರ ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ" ಎಂದರು.
ಇನ್ನು "ಮುಂದಿನ ಮುಖ್ಯಮಂತ್ರಿ ನೀವೇ ಎಂದು ನನಗೂ ಹಲವು ಅಭಿಮಾನಿಗಳು ವಾಟ್ಸ್ ಆ್ಯಪಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿರುತ್ತಾರೆ. ಅಂತೆಯೇ ಇತರ ನಾಯಕರ ಅಭಿಮಾನಿಗಳೂ ಹಾಕುತ್ತಾರೆ. ಅದರಂತೆಯೇ ಶಾಸಕ ಜಮೀರ್ ಅಹ್ಮದ್ ಕೂಡ ಸಿದ್ದರಾಮಯ್ಯ ಅವರ ಅಭಿಮಾನಿಯಾಗಿ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ" ಎಂದು ಹೇಳಿದ್ದಾರೆ.