ಬೆಂಗಳೂರು, ಫೆ.21 (DaijiworldNews/MB) : ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಹಾಗೂ ಅದರ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ.
ಲಿಂಗಾಯತ ಪಂಚಮ ಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಘೋಷಣೆಗೆ ಒತ್ತಾಯಿಸಿ ಕೂಡಲ ಸಂಗಮ ಲಿಂಗಾಯಿತ ಪಂಚಮ ಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಉದ್ದೇಶಿಸಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ವಿಧಾನಸೌಧ ಸುತ್ತಮುತ್ತಲಿನ ಪ್ರದೇಶದಲ್ಲಿ ರಾಜಭವನ, ಉಚ್ಛ ನ್ಯಾಯಾಲಯ, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳಿದ್ದು, ರ್ಯಾಲಿಯ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು, ಸಾರ್ವಜನಿಕ ಹಾಗೂ ಸರ್ಕಾರದ ಆಸ್ತಿ- ಪಾಸ್ತಿಗಳಿಗೆ ನಷ್ಟ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವನ್ನುಂಟು ಮಾಡುವ ಕೃತ್ಯಗಳಲ್ಲಿ ತೊಡಗುವ ಸಾಧ್ಯತೆ ಇರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಪೊಲೀಸ್ ಆಯುಕ್ತ ಕಮಲ್ ಪಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನಸೌಧ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರುವುದನ್ನು, ಯಾವುದೇ ಮೆರವಣಿಗೆ. ಸಭೆ ನಡೆಸುವುದು, ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದು ಮೊದಲಾದ ಪ್ರಚೋದಿತ ಘೋಷಣೆಗಳನ್ನು ನಿಷೇಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.