ನವದೆಹಲಿ, ಫೆ. 21 (DaijiworldNews/HR): ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಚುನಾವಣೆ ತಯಾರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರದಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಈ ಕುರಿತು ಪ್ರಧಾನಿ ಮೋದಿ ರಾಷ್ಟ್ರೀಯ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾರ್ಗದರ್ಶನ ನೀಡಿದ ಬಳಿಕ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾತನಾಡಿ, "ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳು, ಆತ್ಮನಿರ್ಭರ ಭಾರತ ಅಭಿಯಾನ ಮತ್ತು ಕೃಷಿ ಕಾಯ್ದೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು, ರಾಜ್ಯ ಮಟ್ಟದ ತಂಡಗಳ ಸಭೆಗಳು ಹಾಗೂ ಸಂವಾದಗಳನ್ನು ಆಯೋಜಿಸಲಾಗುತ್ತಿದೆ" ಎಂದರು.
ಇನ್ನು ನೂತನ ಕೃಷಿ ಕಾಯ್ದೆಗಳ ವಿರುದ್ಧ ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ ಹಾಗೂ ಪಂಜಾಬ್ನ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವದ್ದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.