ಬೆಂಗಳೂರು, ಫೆ. 22 (DaijiworldNews/SM): ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ ಅನ್ನುವ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆ ತುಂಬಾ ಮಹತ್ವ ಪಡೆದುಕೊಂಡಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಕೇರಳ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಾಗುತ್ತಿದೆ. ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಹೀಗಾಗಿ ಗಡಿಯಲ್ಲಿ ಮತ್ತಷ್ಟು ನಿಗಾ ವಹಿಸಿದ್ದೇವೆ. ಎಸ್ಪಿ, ಸಿಇಒ, ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸಭೆ, ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗೆ ವಿರುದ್ಧವಾಗಿ ಸಭೆ ಸಮಾರಂಭಗಳು ನಡೆಯುತ್ತಿದೆ. ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಇಲ್ಲದೆ ವ್ಯವಹರಿಸುತ್ತಿದ್ದಾರೆ. ಹೀಗಾಗಿ ನಾವು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಸಿಎಂ ಕೂಡ ಸೋಂಕು ನಿಯಂತ್ರಣಕ್ಕೆ ಒತ್ತು ಕೊಟ್ಟಿದ್ದಾರೆ. ಇದೇ ರೀತಿ ಮುಂದುವರೆದಲ್ಲಿ ಮುಂದುವರೆದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಅನಿವಾರ್ಯತೆಯೂ ಎದುರಾಗಬಹುದೆಂದು ಸಚಿವ ಡಾ. ಸುಧಾಕರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.