ಬೆಂಗಳೂರು, ಫೆ.23 (DaijiworldNews/PY): "ಚಿಕ್ಕಬಳ್ಳಾಪುರ ಜಿಲೇಟಿನ್ ಸ್ಫೋಟ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ" ಎಂದಿದ್ದಾರೆ.
"ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಸೂಚಿಸಿದ್ದಾರೆ.
ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.