ನವದೆಹಲಿ, ಫೆ. 25 (DaijiworldNews/HR): ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರೊಂದಿಗೆ ಸೇರಿ ಟೂಲ್ ಕಿಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದ ಆರೋಪ ಎದುರಿಸುತ್ತಿರುವ ಶಂತನು ಮುಲುಕ್ ಅವರಿಗೆ ದೆಹಲಿ ಕೋರ್ಟ್ ಮಾರ್ಚ್ 9ರವರೆಗೆ ಬಂಧನದಿಂದ ರಕ್ಷಣೆ ನೀಡಿದೆ ಎಂದು ತಿಳಿದು ಬಂದಿದೆ.
ಶಂತನು ಮುಲುಕ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು ಅದಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಸಮಯ ಬೇಕೆಂದು ಪೊಲೀಸರು ಹೇಳಿದ ಬಳಿಕ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಆರೋಪಿಗೆ ಬಂಧನದಿಂದ ರಕ್ಷಣೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ಇದೇ ಸಂಧರ್ಭದಲ್ಲಿ ಮಾರ್ಚ್ 9 ರವರೆಗೆ ಶಂತನು ಮುಲುಕ್ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.