ಮೈಸೂರು, ಫೆ.27 (DaijiworldNews/HR): "ಮೈಸೂರು ಮೇಯರ್ ಚುನಾವಣೆಯ ಮೈತ್ರಿ ವಿಚಾರದಲ್ಲಿ ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ, ಹಾಗಾಗಿ ಪಕ್ಷ ನೋಟಿಸ್ ನೀಡಿದರೆ ಅದಕ್ಕೆ ಸೂಕ್ತ ಉತ್ತರ ಕೊಡಲು ಸಿದ್ಧ" ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲವನ್ನೂ ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿದ್ದು, ಅವರ ಸೂಚನೆಯಂತೆ ನಾನು ಕೆಲಸ ಮಾಡಿದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ. ಪಕ್ಷದ ಹಿತ ಕಾಯುವ ನಿಟ್ಟಿನಲ್ಲಿ ನಾನು ನಿರ್ಧಾರ ಮಾಡಿದ್ದೇನೆ" ಎಂದರು.
ಇನ್ನು "ಈ ಬಾರಿ ಮೇಯರ್ ಪಟ್ಟ ನಮಗೆ ಸಿಗಬೇಕು ಎಂದು ಪಕ್ಷದ ವರಿಷ್ಠರು ಸೂಚನೆ ಕೊಟ್ಟಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕೆಲವು ಬದಲಾವಣೆ ಮಾಡುವುದು ಅನಿವಾರ್ಯವಾಗಿದ್ದರಿಂದ ಬಿಟ್ಟುಕೊಟ್ಟೆವು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದು ನಮ್ಮ ಉದ್ದೇಶವಾಗಿತ್ತು" ಎಂದಿದ್ದಾರೆ.
ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ಅವರ ಶಕ್ತಿಗುಂದಿಸುವ ಹುನ್ನಾರ ನಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, " ಯಾರ ಶಕ್ತಿಯನ್ನು ಯಾರೂ ಕೂಡ ಕುಗ್ಗಿಸಲು ಸಾಧ್ಯವಿಲ್ಲ. ಈ ಕುರಿತು ಸಿದ್ದರಾಮಯ್ಯ ಜೊತೆ ಮಾತನಾಡುತ್ತೇನೆ" ಎಂದು ಹೇಳಿದ್ದಾರೆ.