ಮುಂಬೈ, ಮಾ 02 (DaijiworldNews/MS): ಟಿಆರ್ಪಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಮಾಜಿ ಕಾರ್ಯನಿರ್ವಹಣಾಧಿಕಾರಿ ಪಾರ್ಥೋ ದಾಸ್ಗುಪ್ತಾ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಇವರನ್ನು ಕಳೆದ ಡಿ. 24ರಂದು ಬಂಧಿಸಲಾಗಿತ್ತು.
ಟಿಆರ್ಪಿ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಪ್ರಸ್ತುತ ಮಹಾರಾಷ್ಟ್ರದ ತಲೋಜಾ ಜೈಲಿನಲ್ಲಿರುವ ಪಾರ್ಥೋ ದಾಸ್ಗುಪ್ತಾ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು ರೂ. 2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸಬೇಕು, ಆರು ತಿಂಗಳವರೆಗೆ ಪ್ರತಿ ತಿಂಗಳ ಮೊದಲ ಶನಿವಾರ ಮುಂಬೈ ಅಪರಾಧ ವಿಭಾಗಕ್ಕೆ ಹಾಜರಾತಿ ಹಾಕಬೇಕು ಎಂದು ಸೂಚಿಸಲಾಗಿದೆ.
ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಪಿ ಡಿ ನಾಯಕ್ ಅವರು ಎರಡು ವಾರಗಳ ಹಿಂದೆ ತೀರ್ಪು ಕಾಯ್ದಿರಿಸಿದ್ದರು. ಸಿಆರ್ಪಿಸಿ ಸೆಕ್ಷನ್ 439ರ ಅಡಿಯಲ್ಲಿ ಅರ್ಹತೆ ಮತ್ತು ವೈದ್ಯಕೀಯ ಆಧಾರದ ಮೇಲೆ ಪಾರ್ಥೋ ಜಾಮೀನು ಕೋರಿದ್ದರು. ಮುಂಬೈ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಘಟನಾ ಸಂಬಂಧ ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.