ಹುಬ್ಬಳ್ಳಿ, ಮಾ.02 (DaijiworldNews/HR): "ಒಂದರಿಂದ ಐದನೇ ತರಗತಿಯನ್ನು ಪ್ರಾರಂಭಿಸಲು ಒತ್ತಡ ಕೇಳಿ ಬರುತ್ತಿದ್ದು, ಈ ಕುರಿತು ಆರೋಗ್ಯ ಇಲಾಖೆ ತಜ್ಞರ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನೆರೆಯ ರಾಜ್ಯಗಳಲ್ಲಿ ಕೊರೊನಾ ಏರಿಕೆಯಾಗುತ್ತಿದ್ದು, ರಾಜ್ಯದಲ್ಲೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ" ಎಂದರು.
ಇನ್ನು "1ರಿಂದ 5ನೇ ತರಗತಿಗಳ ಪ್ರಾರಂಭಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಎದುರಾಗಬಹುದಾದ ಸಮಸ್ಯೆಗಳ ಕುರಿತು ತಜ್ಞರು ವರದಿ ನೀಡಲಿದ್ದು, ಅದರ ಆಧಾರದ ಮೇಲೆ ಶಾಲೆ ಪ್ರಾರಂಭಿಸಬೇಕೊ ಬೇಡವೊ ಎಂದು ತೀರ್ಮಾನ ಮಾಡಲಾಗುವುದು" ಎಂದು ಹೇಳಿದ್ದಾರೆ.