ಶ್ರೀನಗರ,ಮಾ.05 (DaijiworldNews/HR): ಸಂಸದ ಫಾರೂಕ್ ಅಬ್ದುಲ್ಲಾ ಅವರು ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವ್ಯಾಪ್ತಿಯನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 2020 ಡಿಸೆಂಬರ್ 19ರಂದು ಫಾರೂಕ್ ಅಬ್ದುಲ್ಲಾಗೆ ಸೇರಿದ ಶ್ರೀನಗರ, ಬಾರಾಮುಲ್ಲಾ ಮತ್ತು ಜಮ್ಮುವಿನಲ್ಲಿರುವ ಮೂರು ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದು, ಈ ಎಲ್ಲ ಆಸ್ತಿಗಳ ಮಾರುಕಟ್ಟೆ ಮೌಲ್ಯ 60ರಿಂದ 70 ಕೋಟಿ ಎಂದು ಅಂದಾಜಿಸಲಾಗಿದೆ.
ಇನ್ನು ಜಾರಿ ನಿರ್ದೇಶನಾಲಯವು ತನ್ನ ವ್ಯಾಪ್ತಿಯನ್ನು ಮೀರಿ ನಮ್ಮ ಪೂರ್ವಜರಿಂದ ದೊರೆತ ಮತ್ತು ಕುಟುಂಬದ ಆಸ್ತಿಯನ್ನು ಕಾನೂನು ಬಾಹಿರವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.