ಕೋಲ್ಕತ್ತಾ, ಮಾ.06 (DaijiworldNews/PY): ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದ ಸಂದರ್ಭ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿದ ಪರಿಣಾಮ ಆರು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಗಾಯಗೊಂಡ ಬಿಜೆಪಿ ಕಾರ್ಯಕರ್ತರನ್ನು, ವಿಕ್ರಮ್ ಶಿಲ್, ಸ್ವಪನ್ ಕುರಳಿ, ಶೋವನ್ ದೇಬ್ನಾಥ್, ಮಹಾದೇವ್ ನಾಯಕ್ ಹಾಗೂ ಅರ್ಪಣ್ ದೇಬ್ನಾಥ್ ಎಂದು ಗುರುತಿಸಲಾಗಿದೆ.
ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಕಚ್ಚಾ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿರುವುದಾಗಿ ಬಿಜೆಪಿ ಕಾರ್ಯಕರ್ತರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.