ಬೆಂಗಳೂರು, ಮಾ.06 (DaijiworldNews/PY): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ ಬಿಡುಗಡೆಯ ವಿಚಾರವನ್ನು ಕಾಂಗ್ರೆಸ್ ಪಕ್ಷ , ಬಿಜೆಪಿಯನ್ನು ಲೇವಡಿ ಮಾಡಲು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿದ್ದು, ಇದೀಗ "ಬಿಜೆಪಿ ಬ್ಲೂ ಬಾಯ್ಸ್" ಎಂದು ವ್ಯಂಗ್ಯಮಾಡಿದೆ.
ಸಾಂದರ್ಭಿಕ ಚಿತ್ರ
ಇನ್ನೊಂದೆಡೆ ಸಿಡಿ ಅಲರ್ಟ್ ಆಗಿರುವ ಇತರ ಆರು ಸಚಿವರು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬಗ್ಗೆ ಯಾವುದೇ ಮಾನಹಾನಿಕಾರಕ ವರದಿ ಪ್ರಸಾರ ಮಾಡದಂತೆ ಕೋರ್ಟ್ ಮೂಲಕ ತಡೆಯಾಜ್ಞೆ ತರಲು ನಿರ್ಬಂಧ ಕೋರಿ ನ್ಯಾಯಾಲಯದ ಮೊರೆಹೋಗಿದ್ದಾರೆ.
"ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದಂತೆ ಕಣ್ಣಿನಲ್ಲಿ ನೋಡಲಾಗದಂತ ಸಿ.ಡಿ ಇದೆಯಂತೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ನೀವು ತಡೆಯಾಜ್ಞೆ ತರುವುದಿಲ್ಲವೇ?!" ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಬಿಜೆಪಿಯ ಕಾಳೆಲೆದಿದೆ.
ಶಾಸಕ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ಪ್ರಕರಣ ಬಯಲಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ತಮ್ಮ ಬಗ್ಗೆ ಯಾವುದೇ ಮಾನಹಾನಿಕಾರಕ ವರದಿ ಪ್ರಸಾರ ಮಾಡದಂತೆ ನಿರ್ಬಂಧ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ. ಸಿ. ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾನಹಾನಿಕರ ಸುದ್ದಿಯನ್ನು ನಿರ್ಬಂಧಿಸುವಂತೆ ಬೆಂಗಳೂರಿನ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.