ಬೆಂಗಳೂರು, ಮಾ 08 (DaijiworldNews/MS): ಕೊರೊನಾ ಸಾಂಕ್ರಮಿಕ ಕಾಲಘಟ್ಟದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 2021-22ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ 8ನೇ ಬಜೆಟ್ ಮಂಡಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 12.00ಕ್ಕೆ ಮುಂಗಡ ಪತ್ರ ಮಂಡನೆಯಾಗಲಿದೆ.
ಇನ್ನು ಹಣಕಾಸು ಖಾತೆ ಹೊಂದಿರುವ ಸಿಎಂ ಯಡಿಯೂರಪ್ಪನವರು 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಇಂದು ಮಂಡಿಸುವುದಾಗಿ ಟ್ವೀಟರ್ ನಲ್ಲಿ ಪ್ರಕಟಿಸಿದ್ದಾರೆ.
ಕಳೆದ ಆರ್ಥಿಕ ವರ್ಷದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ, ನೆರೆ ಹಾಗೂ ಬರದ ಹಿನ್ನೆಲೆಯಲ್ಲಿ ಆರ್ಥಿಕ ಸ್ಥಿತಿ ಗಂಭೀರವಾಗಿರುವುದರಿಂದ ಈ ಬಾರಿ ಸಮತೋಲಿತ ಬಜೆಟ್ ಮಂಡನೆ ಮಾಡುವ ನಿರೀಕ್ಷೆ ಇದೆ.
ಸಿಎಂ ಯಡಿಯೂರಪ್ಪನವರು ಈ ಹಿಂದೆ 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2 ಬಾರಿ ಬಜೆಟ್ ಮಂಡಿಸಿದ್ದರು. ಆ ಬಳಿಕ ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡನೆ ಮಾಡಿದ್ದರು. 2020ರಲ್ಲಿ 7ನೇ ಬಾರಿಗೆ ಬಜೆಟ್ ಮಂಡಿಸಿದ್ದರು.