ಬೆಂಗಳೂರು, ಮಾ.08 (DaijiworldNews/MB): ಪ್ರಸ್ತುತ 2021-22ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಮಂಡನೆ ಮಾಡಿದ್ದು ಈ ಬಾರಿ ಹೊಸದಾಗಿ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಬಿಎಸ್ವೈ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದಕ್ಕಾಗಿ 500 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.
ಉಳಿದಂತೆ ಯಾವ್ಯಾವ ಜಾತಿ, ಸಮುದಾಯಕ್ಕೆ ಎಷ್ಟೆಷ್ಟು ಅನುದಾನವನ್ನ ಮುಖ್ಯಮಂತ್ರಿ ಘೋಷಿಸಿದ್ದಾರೆ, ಇಲ್ಲಿದೆ ಸಂಪೂರ್ಣ ಮಾಹಿತಿ.
ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಬಜೆಟ್ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಿಸಿದ್ದು, ಲಿಂಗಾಯತ ಅಭಿವೃದ್ಧಿ ನಿಗಮವನ್ನು ಈಗಾಗಲೇ ಘೋಷಣೆ ಮಾಡಿ 500 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ಸ್ಥಾಪಿಸಲಾಗುತ್ತದೆ. ಅದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿವಿಧ ಅಭಿವೃದ್ಧಿ ನಿಗಮಗಳಿಗೆ ಒಟ್ಟಾರೆ 500 ಕೋಟಿ ರೂ ಅನುದಾನ ನೀಡಲಾಗುತ್ತಿದೆ ಎಂದು ಕೂಡಾ ಅವರು ಹೇಳಿದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಬಿಡುಗಡೆ ಮಾಡಲಾಗುತ್ತದೆ. ಪೈಕಿ 100 ಕೋಟಿ ಈಗಾಗಲೇ ಬಿಡುಗಡೆ ಮಾಡಲಾಗಿದೆ.
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಚಟುವಟಿಕೆಗಳಿಗೆ 50 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯಡಿಯಲ್ಲಿ 150 ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ.
ಅಲ್ಪಸಂಖ್ಯಾತರ ಏಳಿಗೆಗಾಗಿ 1500 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕ್ರೈಸ್ತ ಸಮುದಾಯದ ಅಭಿವೃದ್ಧಿ ಕಾರ್ಯಕ್ಕೆ 200 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಚರ್ಚ್ ನವೀಕರಣ, ಕ್ರೈಸ್ತ ಸಮುದಾಯ ಭವನದ ಕಟ್ಟಡ ನಿರ್ಮಾಣ, ಕ್ರೈಸ್ತ ಸಮುದಾಯದ ಅನಾಥಾಶ್ರಮ, ವೃದ್ಧಾಶ್ರಮಗಳ ಅಭಿವೃದ್ಧಿಗೆ ಈ ಹಣ ಮೀಸಲಾಗಿರುತ್ತದೆ.
ವಿವಿಧ ಹಿಂದುಳಿದ ಅಭಿವೃದ್ಧಿ ನಿಗಮಗಳಲ್ಲಿ ವಿವಿಧ ಚಟುವಟಿಕೆಗಳ ವೆಚ್ಚಕ್ಕಾಗಿ 500 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ ಸೇರಿ ಹಲವು ನಿಗಮಗಳ ಚಟುವಟಿಕೆಗೆ ಈ ಹಣ ಮೀಸಲಾಗಿರುತ್ತದೆ.