ಶಿವಮೊಗ್ಗ, ಮಾ.12 (DaijiworldNews/PY): "ಶಿವಮೊಗ್ಗಕ್ಕೆ ದುಬೈಯಿಂದ ಬಂದ ವ್ಯಕ್ತಿಗೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲದ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಜಿಲ್ಲೆಗೆ ದುಬೈಯಿಂದ ಆಗಮಿಸಿದ ವ್ಯಕ್ತಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ. ಆತನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರಿಗೂ ಕೂಡಾ ಕೊರೊನಾ ನೆಗೆಟಿವ್ ಬಂದಿದೆ. ಅಲ್ಲದೇ, ವ್ಯಕ್ತಿಯೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದ 39 ಮಂದಿಯ ತಪಾಸಣೆ ಮಾಡಲಾಗಿದೆ. ಅವರಿಗೂ ನೆಗೆಟಿವ್ ಬಂದಿದೆ. ಈ ಬಗ್ಗೆ ಯಾರೂ ಕೂಡಾ ಭಯಪಡುವ ಅವಶ್ಯಕತೆ ಇಲ್ಲ" ಎಂದಿದ್ದಾರೆ.
"ಸರ್ಕಾರಿ ಆಸ್ಪತ್ರೆಗಳಲ್ಲಿ ಜಿಲ್ಲೆಯಲ್ಲಿ 60ವರ್ಷ ಮೇಲ್ಪಟ್ಟವರಿ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆ, ಆಯುರ್ವೇದಿಕ್ ಕಾಲೇಜು ಆಸ್ಪತ್ರೆ ಸೇರಿದಂತೆ 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ 41 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ" ಎಂದು ತಿಳಿಸಿದ್ದಾರೆ.
"ಜಿಲ್ಲೆಯ 8 ಖಾಸಗಿ ಆಸ್ಪತ್ರೆಗಳಲ್ಲಿ 250. ರೂ. ದರ ನಿಗದಿ ಮಾಡಿ ಲಸಿಕೆ ನೀಡಲಾಗುತ್ತಿದೆ. ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಿ" ಎಂದು ಕೋರಿದ್ದಾರೆ.
"ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಮ್ಮ ರಾಜ್ಯದಲ್ಲಿಯೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಪ್ರಾರಂಭ ಮಾಡಲು ಸರ್ಕಾರ ಅನುಮತಿ ನೀಡಿಲ್ಲ. ಆರನೇ ತರಗತಿಯಿಂದ ಮೇಲಿನವರಿಗೆ ಮಾತ್ರವೇ ಶಾಲೆ ನಡೆಸಲು ಸರ್ಕಾರ ಅನುಮತಿ ನೀಡಿದೆ" ಎಂದಿದ್ದಾರೆ.