ಶ್ರೀನಗರ, ಮಾ.13 (DaijiworldNews/MB): ಭಾರತೀಯ ಸೇನೆ ಮತ್ತು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿದ್ದ ಕುಖ್ಯಾತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ಗೆ ಸೇರಿದ 7 ಮಂದಿ ಉಗ್ರರನ್ನು ವಶಕ್ಕೆ ಪಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ಶೋಪಿಯಾನ್ ಪೊಲೀಸ್ ವಕ್ತಾರರು, ''ದೊರೆತ ಖಚಿತ ಮಾಹಿತಿ ಆಧಾರದಲ್ಲಿ ರಾತ್ರಿ ವೇಳೆ ದಾಳಿ ನಡೆಸಿದ್ದು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಏಳು ಸಹಚರರನ್ನು ಬಂಧಿಸಿದೆ. ಈ ಏಳು ಮಂದಿಯೂ ಕೂಡಾ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ನೆರವು ನೀಡುತ್ತಿದ್ದರು'' ಎಂದು ತಿಳಿಸಿದ್ದಾರೆ.
ಇನ್ನು ಪೊಲೀಸರು ಬಂಧಿತರಿಂದ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಕಾರ್ಯಾಚರಣೆಯನ್ನು ಇನ್ನಷ್ಟು ಬಿಗಿಗೊಳಿಸಿದ್ದು ಉಗ್ರ ಸಹಚರರನ್ನು ಬಂಧಿಸುವ ಸಾಧ್ಯತೆಯಿದೆ.