ಬೆಂಗಳೂರು, ಮಾ.14 (DaijiworldNews/MB) : ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಪ್ರಾಥಮಿಕ ಶಾಲೆಗಳನ್ನು ಪುನಃ ತೆರೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ನಿರ್ಧಾರ ಕೈಗೊಳ್ಳುವುದು ವಿಳಂಬವಾಗುವ ಸಾಧ್ಯತೆಯಿದೆ.
ಆರನೇ ತರಗತಿಯಿಂದ 12 ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳು ನಡೆಯುತ್ತಿವೆ. ಬೆಂಗಳೂರು ನಗರ, ಮಹಾರಾಷ್ಟ್ರ ಮತ್ತು ಕೇರಳದ ಗಡಿ ಪ್ರದೇಶಗಳಲ್ಲಿ ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾಗಮ ನಡೆಯುತ್ತಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ಪ್ರಥಮದಿಂದ ಐದನೇ ತರಗತಿವರೆಗೆ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ಕೋರಿ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿತ್ತು. ಆದಾಗ್ಯೂ, ಕೊರೊನಾ ಪ್ರಕರಣಗಳ ಸಂಖ್ಯೆಯು ಹಠಾತ್ತನೆ ಏರಿಕೆ ಕಂಡ ಕಾರಣ ಪ್ರಾಥಮಿಕ ಶಾಲೆ ಪುನರಾರಂಭ ವಿಳಂಬವಾಗುವ ಸಾಧ್ಯತೆಯಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ತಾಂತ್ರಿಕ ಸಲಹಾ ಸಮಿತಿ ಮತ್ತು ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ಪ್ರಥಮ ಹಾಗೂ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ಮತ್ತು ಮಾರ್ಗದರ್ಶನ ಪಡೆಯಲು ಸಭೆ ನಡೆಸಲಿದ್ದಾರೆ. ಆದರೆ, ಸಭೆಯ ದಿನಾಂಕವನ್ನು ಇನ್ನೂ ನಿಗದಿಪಡಿಸಿಲ್ಲ. ಈ ವಿಷಯದಲ್ಲಿ ಯಾವುದೇ ನಿರ್ಧಾರವು ಈ ತಿಂಗಳ ಅಂತ್ಯದ ಮೊದಲು ತೆಗೆದುಕೊಳ್ಳಲಾರರು ಎಂಬುದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಅಭಿಪ್ರಾಯವಾಗಿದೆ.