ಬೆಂಗಳೂರು, ಮಾ.25 (DaijiworldNews/MB) : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರ ಸ್ಪರ್ಧಿಸಲು ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಸಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ಘೋಷಿಸಿದ್ದಾರೆ. ಆದರೆ ಎಐಸಿಸಿಯಿಂದ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.
ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯನವರು, ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನು ಘೋಷಣೆ ಮಾಡಿದ್ದಾರೆ.
ಈ ಕ್ಷೇತ್ರದ ಉಪಚುನಾವಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಕೂಡಾ ಕೇಳಿಬಂದಿತ್ತು. ಆದರೆ ಸತೀಶ್ ಜಾರಕಿಹೊಳಿ ಸ್ಪರ್ಧಿಸುವುದೇ ಬಹುತೇಕ ಖಚಿತವಾಗಿತ್ತು. ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿ ವರಿಷ್ಠರೊಂದಿಗೆಯೂ ಮಾತುಕತೆ ನಡೆಸಿದ್ದಾರೆ.
ಜಾರಕಿಹೊಳಿ ಈ ಕ್ಷೇತ್ರದಲ್ಲಿ ಉಪಚುನಾವಣೆಗೆ ಸ್ಪರ್ಧಿಸಬೇಕು ಎಂಬ ಬೇಡಿಕೆ ಅಧಿಕವಾಗಿದ್ದ ಹಿನ್ನೆಲೆ ಹೈಕಮಾಂಡ್ ಸಮ್ಮತಿಸಿದೆ ಎಂದು ಹೇಳಲಾಗಿದೆ.