ಬೆಂಗಳೂರು, ಮಾ.29 (DaijiworldNews/PY): ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವರು ಹಾಗೂ ವಲಯ ಉಸ್ತುವಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ಗಂಟೆಗೆ ಸಭೆ ನಡೆಯಲಿದ್ದು, ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ವಿಚಾರದ ಬಗ್ಗೆ ಚರ್ಚೆ ನಡೆಯಲಿದ್ದು, ಸಚಿವರುಗಳಿಂದ ಅಭಿಪ್ರಾಯ ಪಡೆದುಕೊಂಡು, ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸಿಎಂ ಅವರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
"ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಸಾಕಾಗುವುದಿಲ್ಲ. ಗಡಿಭಾಗಗಳಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಈ ವಿಚಾರದ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ" ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.