ಬೆಂಗಳೂರು, ಏ.01 (DaijiworldNews/HR): "ಅನುದಾನ ಬಿಡುಗಡೆ ವಿಚಾರದ ಕುರಿತು ಭಿನ್ನಾಭಿಪ್ರಾಯ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇಲಾಖೆಯ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುವುದಾಗಿ ಈಶ್ವರಪ್ಪ ಹೇಳಿಕೆ ನೀಡಿದ್ದನ್ನು ನಾನು ಗಮನಿಸಿದ್ದೇನೆ. ತುರ್ತಾಗಿ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲಿ" ಎಂದರು.
"ಕಳೆದ ವರ್ಷ ಕೊರೊನಾದಿಂದಾಗಿ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸರಿ ಇರಲಿಲ್ಲ. ಇತ್ತೀಚೆಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಶಾಸಕರ ಒತ್ತಡದ ಮೇರೆಗೆ ಶಾಸಕರಿಗೆ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ" ಎಂದಿದ್ದಾರೆ.
ಇನ್ನು "ನಮ್ಮ ಬಿಜೆಪಿ ಶಿಸ್ತಿನ ಪಕ್ಷ. ಶಿಸ್ತು ಉಲ್ಲಂಘನೆ ಆಗಬಾರದು. ಮುಖ್ಯಮಂತ್ರಿ ನೇತೃತ್ವದಲ್ಲಿ ಆಡಳಿತ ಮಾಡುತ್ತಿದ್ದೇವೆ. ಜನಕಲ್ಯಾಣ ಕೆಲಸ ಮಾಡುತ್ತಿದ್ದೇವೆ" ಎಂದು ಹೇಳಿದ್ದಾರೆ.