ನವದೆಹಲಿ, ಎ.04 (DaijiworldNews/PY): "ಮುಂಬರುವ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ದರಗಳು ಮತ್ತಷ್ಟು ಕಡಿಮೆಯಾಗುತ್ತವೆ" ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇದೀಗ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ದರದಲ್ಲಿ ಇಳಿಕೆ ಪ್ರಾರಂಭವಾಗಿದ್ದು, ಮುಂಬರುವ ದಿನಗಳಲ್ಲಿ ತೈಲ ಬಲೆ ಕಡಿಮೆಯಾಗಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯು ಕಡಿಮೆ ಅಗುತ್ತಿರುವ ಕಾರಣ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತೇವೆ" ಎಂದು ತಿಳಿಸಿದ್ದಾರೆ.
"ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸಾರ್ವಜನಿಕ ಬೇಡಿಕೆಗಳನ್ನು ಈಡೇರಿಸಲು ಹಾಗೂ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಹಣದ ಅವಶ್ಯಕತೆ ಇರುವ ಕಾರಣ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಕಡಿಮೆ ಮಾಡುವುದಿಲ್ಲ" ಎಂದಿದ್ದಾರೆ.
ದೆಹಲಿಯಲ್ಲಿ ಪ್ರತಿ ಲೀಟರ್ ಬೆಲೆ 90.56 ಪೈಸೆಯಾಗಿದ್ದರೆ, ಡೀಸೆಲ್ ಬೆಲೆ 80.87 ಪೈಸೆ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 93.59 ರೂ. ಇದ್ದು, ಡೀಸೆಲ್ ಬೆಲೆ 85.75 ಪೈಸೆ ಇದೆ.