ಮುಂಬೈ, ಎ.05 (DaijiworldNews/PY): ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಸಿಲುಕಿದ್ದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ರಾಜೀನಾಮೆ ಸಲ್ಲಿಸಿದ್ದಾರೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ 15 ದಿನಗಳ ಒಳಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.
ದೇಶಮುಖ್ ಅವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದು, ಚರ್ಚೆ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಹ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದು, ನಂತರ ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ.
ಸಿಎಂ ಉದ್ದವ್ ಠಾಕ್ರೆ ಅವರನ್ನು ಭೇಟಿಯಾದ ಅನಿಲ್ ದೇಶ್ಮುಖ್, ಠಾಕ್ರೆ ಅವರಿಗೆ ಅಧಿಕೃತ ರಾಜೀನಾಮೆ ಸಲ್ಲಿಸಿದ್ದಾರೆ.
ಮುಂಬೈನಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ಗಳಿಂದ ಸಚಿವ ದೇಶ್ಮುಖ್ ಅವರು ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು ಎಂದು ಪರಮ್ ಬೀರ್ ಸಿಂಗ್ ಆರೋಪಿಸಿದ್ದರು.