ನವದೆಹಲಿ, ಎ.08 (DaijiworldNews/MB) : ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಸ್ಕ್ ಧರಿಸುವುದನ್ನು ಕಡ್ಡಾಗೊಳಿಸಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ಗುರುವಾರ ನೋಟಿಸ್ ನೀಡಿದೆ.
ಉತ್ತರ ಪ್ರದೇಶದ ಮಾಜಿ ಡಿಜಿಪಿ ಮತ್ತು ಸೆಂಟರ್ ಫಾರ್ ಅಕೌಂಟೆಬಿಲಿಟಿ ಮತ್ತು ಸಿಸ್ಟಮಿಕ್ ಚೇಂಜ್ ಸಂಸ್ಥೆ ಅಧ್ಯಕ್ಷರಾಗಿರುವ ವಿಕ್ರಮ್ ಸಿಂಗ್ ದೇಶದೆಲ್ಲೆಡೆ ಚುನಾವಣಾ ಪ್ರಚಾರದ ವೇಳೆ ಮಾಸ್ಕ್ ಧರಿಸುವುದನ್ನು ಕಡ್ಡಾಗೊಳಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ಕೊರೊನಾ ಮಾರ್ಗಸೂಚಿಗಳನ್ನು ಚುನಾವಣಾ ಪ್ರಚಾರ ನಡೆಸುವವರು ಹಾಗೂ ಅಭ್ಯರ್ಥಿಗಳು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಈ ಅರ್ಜಿಯಲ್ಲಿ ದೂರುದಾರರು ಆರೋಪಿಸಿದ್ದರು.
ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನು ಒಳಗೊಂಡ ಪೀಠವು, ಈ ಬಗ್ಗೆ ಪ್ರತಿಕ್ರಿಯೆ ನೀಡಿ ಎಂದು ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿ ಅರ್ಜಿ ವಿಚಾರಣೆಯನ್ನು ಏ. 30ಕ್ಕೆ ಮುಂದೂಡಿದೆ.
ಈ ಹಿಂದೆ ಮಾಸ್ಕ್ ವಿಚಾರದಲ್ಲೇ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಕಾರಿನಲ್ಲಿ ಒಬ್ಬರೇ ಸಂಚಾರ ಮಾಡುತ್ತಿದ್ದರೂ ಮಾಸ್ಕ್ ಧರಿಸಬೇಕು ಎಂದು ಹೇಳಿತ್ತು.