ವಿಜಯಪುರ, ಎ.08 (DaijiworldNews/PY): "ಕಳೆದ ವರ್ಷ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ಬರೆದು ವಿದ್ಯಾರ್ಥಿಗಳನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಲಾಗಿದೆ" ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ಪೂರ್ವ ತಯಾರಿಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, "ಬೋರ್ಡ್ ಪರೀಕ್ಷೆಗಳು ಯಾವುದೇ ತೊಂದರೆ ಇಲ್ಲದೇ ಸುಗಮವಾಗಿ ನಡೆಯಬೇಕು ಎನ್ನುವ ದೃಷ್ಟಿಯಿಂದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನವನ್ನು ಜಾರಿಗೊಳಿಸಲಾಗುವುದು" ಎಂದಿದ್ದಾರೆ.
"ಮೇ 24ರಿಂದ ಪಿಯುಸಿ ಹಾಗೂ ಜೂನ್ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿದೆ. ಎಲ್ಲಾ ಶಿಕ್ಷಕರು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಧನ್ಯವಾದಗಳು" ಎಂದು ತಿಳಿಸಿದ್ದಾರೆ.
"1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸುವ ಬಗೆಗಿನ ವದಂತಿಗಳನ್ನು ನಂಬಬೇಡಿ. ಪರೀಕ್ಷೆ ನಡೆಸಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ ಸರ್ಕಾರ ಇನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ಚರ್ಚೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.