ಹುಮ್ನಾಬಾದ್, ಎ.08 (DaijiworldNews/MB) : ''ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡುತ್ತದೆ'' ಎಂದು ಗೃಹ, ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಹುಮ್ನಾಬಾದ್ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ''ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗಳು ಸೂಕ್ತ ಭದ್ರತೆ ನೀಡಲಾಗುವುದು. ಇದು ಸರ್ಕಾರದ ಕರ್ತವ್ಯ'' ಎಂದು ಹೇಳಿದರು.
''ಇನ್ನು ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ರಕ್ಷಣೆ ನೀಡುವ ಬಗ್ಗೆ ರಾಜ್ಯದಲ್ಲಿರುವ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸರ್ಕಾರ ಸೂಚನೆ ನೀಡಿದೆ'' ಎಂದೂ ತಿಳಿಸಿದರು.
''ನೌಕರರಿಗೆ ಒಳ್ಳೆಯ ಸಂಬಳ ನೀಡಲು ದುಡಿದರೆ ಮಾತ್ರ ಸಾಧ್ಯವಾಗುತ್ತದೆ. ಈಗ ಮುಷ್ಕರದಿಂದ ಸಾರಿಗೆ ಸಂಸ್ಥೆಗೆ ದೊಡ್ಡಮಟ್ಟದ ನಷ್ಟವಾಗುತ್ತಿದೆ'' ಎಂದು ಹೇಳಿದರು.